ರಾಜ್ಯ

ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಿಗೆ ಉಚಿತ ವಿದ್ಯುತ್, ಉಚಿತ ನೀರು: ಸಿಎಂ ಸಿದ್ದರಾಮಯ್ಯ ಘೋಷಣೆ

1

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಹಾಗೂ ಕುಡಿಯುವ ನೀರು ನೀಡುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ.

ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿದ ಅವರು ಮಾತನಾಡಿದರು.

ಕನ್ನಡಿಗರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿಶಾಲಿಗಳನ್ನಾಗಿ ಮಾಡುವ ಜತೆಗೆ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ, ಕನ್ನಡ ಶಾಲೆಗಳ ಮೂಲಭೂತ ಸವಲತ್ತುಗಳನ್ನು ಹೆಚ್ಚಿಸಲು ನಮ್ಮ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ ಎಂದು ತಿಳಿಸಿದರು.

Advertisement. Scroll to continue reading.

ದೇವರಾಜು ಅರಸು ಅವರು ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಿಟ್ಟು 50 ವರ್ಷಗಳು ತುಂಬಿವೆ. ಈ ದಿನ ನಾವು ಒಂದು ಪ್ರತಿಜ್ಞೆ ಮಾಡೋಣ. ಕನ್ನಡದಲ್ಲೇ ವ್ಯವಹರಿಸುವ ಪ್ರತಿಜ್ಞೆಯನ್ನು ನಾವು ಮಾಡುವ ಮೂಲಕ ನಮ್ಮ ತಾಯ್ನೆಲದ ಋಣ ತೀರಿಸುವ ಕೆಲಸ ಮಾಡೋಣ. ಇಲ್ಲಿ ವಾಸ ಮಾಡುವ ಪ್ರತಿಯೊಬ್ಬರೂ ಕನ್ನಡದ ವಾತಾವರಣವನ್ನು ಸೃಷ್ಟಿಸಬೇಕು, ಸಂಭ್ರಮಿಸಬೇಕು ಎಂದು ಕರೆ ನೀಡಿದರು.

ಕನ್ನಡ ನೆಲದಲ್ಲಿದ್ದೂ ಕನ್ನಡ ಮಾತನಾಡದವರು ಹಲವು ಭಾಗಗಳಲ್ಲಿ ಇದ್ದಾರೆ. ನಮ್ಮ ಆಡಳಿತ ಭಾಷೆ ಕನ್ನಡ. ಆದ್ದರಿಂದ ನಾವು ಕನ್ನಡದಲ್ಲೇ ವ್ಯವಹರಿಸಬೇಕು. ಪ್ರತಿಯೊಬ್ಬರ, ಪ್ರತಿಯೊಂದು ಭಾಷೆಗೂ ನಾವು ಗೌರವ ಕೊಡಬೇಕು. ಆದರೆ, ನಮ್ಮ ನಾಡಿನಲ್ಲಿ ವ್ಯವಹರಿಸುವಾಗ, ಆಡಳಿತದಲ್ಲಿ ಕನ್ನಡ ಬಳಕೆ ಆಗಬೇಕು. ಇದನ್ನು ಪ್ರತಿಯೊಬ್ಬ ಅಧಿಕಾರಿಯೂ ಚಾಚೂ ತಪ್ಪದೆ ಪಾಲಿಸಬೇಕು ಎಂದು ಹೇಳಿದರು.

ಕೇಂದ್ರ ಸರ್ಕಾರಕ್ಕೆ ಪತ್ರ :

ಕೇಂದ್ರ ಇಂಗ್ಲಿಷ್ ಹಾಗೂ ಹಿಂದಿಯಲ್ಲಿ ಮಾತ್ರ ಪರೀಕ್ಷೆ ನಡೆಸುತ್ತಿದೆ. ನಮ್ಮ ಮಕ್ಕಳಿಗೆ ತಿಳಿದಿರುವ ಭಾಷೆಯಲ್ಲಿ ಪರೀಕ್ಷೆ ಮಾಡಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರಕ್ಕೆ ಪತ್ರವನ್ನು ಬರೆಯುತ್ತೇನೆ ಎಂದರು.

Advertisement. Scroll to continue reading.

ಕಲಿಕೆ ಕನ್ನಡ ಮಾಧ್ಯಮದ ಮೂಲಕ ಆಗಬೇಕು. ಆದರೆ ಇತ್ತೀಚೆಗೆ ಸರ್ಕಾರಿ ಶಾಲೆಗಳಿಗೆ ಬರುವ ವಿದ್ಯಾರ್ಥಿಗಳು ಕಡಿಮೆಯಾಗಿ ಖಾಸಗಿ ಇಂಗ್ಲಿಷ್ ಶಾಲೆಗಳಿಗೆ ಹೋಗುವ ಸಂಖ್ಯೆ ಹೆಚ್ಚಾಗುತ್ತಿದೆ. ಇದು ಅಪಾಯಕಾರಿ ನಡೆ. ಕನ್ನಡದಲ್ಲಿ ಓದಿದರೆ ಉದ್ಯೋಗ ಸಿಗುವುದಿಲ್ಲ ಎಂಬ ತಪ್ಪು ಕಲ್ಪನೆ ಸರಿಯಲ್ಲ ಎಂದರು.

ರಾಜ್ಯದ ಅನೇಕ ಮಂದಿ ವಿಜ್ಞಾನಿಗಳು ಕನ್ನಡದಲ್ಲೇ ಓದಿ ದೊಡ್ಡ ಸಾಧನೆ ಮಾಡಿದ್ದಾರೆ. ಇಂಗ್ಲಿಷ್ ಮಾಧ್ಯಮದಲ್ಲೇ ಓದಬೇಕು ಎಂಬುವುದು ತಪ್ಪು ಕಲ್ಪನೆ. ಪೋಷಕರಿಗೆ ಮಕ್ಕಳು ಯಾವ ಭಾಷೆಯಲ್ಲಿ ಕಲಿಯಬೇಕು ಎಂದು ನಿರ್ಧರಿಸುವ ಹಕ್ಕು ಇದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಇದರಿಂದ ನಮ್ಮ ಪ್ರಯತ್ನಕ್ಕೆ ಹಿನ್ನಡೆಯಾಗಿದೆ. ಆದರೆ, ಮಾತೃಭಾಷೆಯ ಮಾಧ್ಯಮದಲ್ಲೇ ಕಲಿಯುವುದು ಅತ್ಯಂತ ವೈಜ್ಞಾನಿಕ ಎನ್ನುವುದನ್ನು ಗ್ರಹಿಸಬೇಕು ಎಂದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪ್ರಾಥಮಿಕ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಶಾಸಕ ರಿಜ್ಷಾನ್ ಹರ್ಷದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com