ಬೆಂಗಳೂರು: ಉದ್ಯಮಿಯೊಬ್ಬರಿಗೆ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ವಂಚಿಸಿದ್ದಾರೆನ್ನಲಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂರನೇ ಆರೋಪಿಯಾಗಿರುವ ವಿಜಯನಗರ ಜಿಲ್ಲೆಯ ಹಿರೇಹಡಗಲಿ ಹಾಲಸ್ವಾಮಿ ಮಠದ ಅಭಿನವ ಹಾಲಶ್ರೀ ಸ್ವಾಮೀಜಿಗೆ ಹೈಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿದೆ.
ಜಾಮೀನು ಕೋರಿ ಹಾಲಶ್ರೀ ಸ್ವಾಮೀಜಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯಪೀಠ ಮಾನ್ಯ ಮಾಡಿದೆ.
ಸರಕಾರಿ ಅಭಿಯೋಜಕರು ಹಾಜರಾಗಿ, ಅರ್ಜಿದಾರರ ವಿರುದ್ಧದ ತನಿಖಾಧಿಕಾರಿಗಳು ಬುಧವಾರ ವಿಚಾರಣಾ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆಂದು ತಿಳಿಸಿದರು.
Advertisement. Scroll to continue reading.
ಆಗ ಅರ್ಜಿದಾರರ ಪರ ಹಿರಿಯ ವಕೀಲ ಅರುಣ್ ಶ್ಯಾಮ್, ‘ಆರೋಪಪಟ್ಟಿ ಸಲ್ಲಿಕೆಯಾಗಿರುವುದರಿಂದ ತನಿಖೆ ಪೂರ್ಣಗೊಂಡಂತಾಗಿದೆ. ಹಾಗಾಗಿ ಅರ್ಜಿದಾರರು ತನಿಖೆ ಎದುರಿಸುವ ಅಗತ್ಯವಿಲ್ಲ. ಅರ್ಜಿದಾರರು ಪಡೆದಿದ್ದಾರೆ ಎನ್ನಲಾದ ಹಣವನ್ನು ಈಗಾಗಲೇ ತನಿಖಾಧಿಕಾರಿ ಜಪ್ತಿ ಮಾಡಿ ಮ್ಯಾಜಿಸ್ಪ್ರೇಟ್ ಕೋರ್ಟ್ ವಶಕ್ಕೆ ಒಪ್ಪಿಸಿದ್ದಾರೆ. ಏಳಕ್ಕಿಂತ ಕಡಿಮೆ ವರ್ಷ ಶಿಕ್ಷೆ ವಿಧಿಸಬಹುದಾದ ಆರೋಪಗಳು ಅರ್ಜಿದಾರರ ಮೇಲಿದೆ. ಜಾಮೀನು ಮಂಜೂರು ಮಾಡಬಹುದಾಗಿದೆ ಎಂದು ನ್ಯಾಯಾಲಯಕ್ಕೆ ವಿವರಿಸಿದರು. ಆ ವಾದವನ್ನು ಪರಿಗಣಿಸಿದ ನ್ಯಾಯಪೀಠ, ಹಾಲಶ್ರೀ ಸ್ವಾಮೀಜಿಗೆ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.
ಏನಿದು ಪ್ರಕರಣ?
ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ತನ್ನಿಂದ ಐದು ಕೋಟಿ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಆರೋಪಿಸಿ, ಉದ್ಯಮಿ ಗೋವಿಂದಬಾಬು ಪೂಜಾರಿ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣದ ಆರೋಪಿಗಳಾದ ಹಿಂದೂ ಕಾರ್ಯಕರ್ತೆ ಚೈತ್ರಾ, ಶ್ರೀಕಾಂತ್, ರಮೇಶ್, ಗಗನ್, ಪ್ರಜ್ವಲ್ ಹಾಗೂ ಧನರಾಜ್ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು.
ದೂರುದಾರರಿಂದ 1.5 ಕೋಟಿ ರೂ. ಹಣ ಪಡೆದ ಆರೋಪದ ಮೇಲೆ ಹಾಲಶ್ರೀ ಸ್ವಾಮೀಜಿಯನ್ನು 2023ರ ಸೆಪ್ಟೆಂಬರ್ 19ರಂದು ಸಿಸಿಬಿ ಪೊಲೀಸರು ಒಡಿಶಾದ ಕಟಕ್ನಲ್ಲಿ ಬಂಧಿಸಿದ್ದರು. ಜಾಮೀನು ನೀಡಲು ಬೆಂಗಳೂರಿನ 57ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯ ನಿರಾಕರಿಸಿತ್ತು. ಇದರಿಂದ ಸ್ವಾಮೀಜಿ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಿದ್ದರು.
Advertisement. Scroll to continue reading.