ಬೆಳಗಾವಿ: ಮತಾಂತರ ನಿಷೇಧ ಕಾಯ್ದೆ ವಿಧೇಯಕ ಮಂಡನೆಗೆ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದ್ದು ನಾಳೆ ಈ ಮಸೂದನೆ ವಿಧಾನಸಭೆಯಲ್ಲಿ ಮಂಡನೆಯಾಗಲಿದೆ ಎಂದು ತಿಳಿದುಬಂದಿದೆ.
ಸಚಿವ ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕಕ್ಕೆ ಅನುಮೋದನೆ ಪಡೆಯಲಾಗಿದೆ. ನಾಳೆ ಅದನ್ನು ವಿಧಾನಸಭೆಯಲ್ಲಿ ಮಂಡಿಸಿ ಅಂಗೀಕಾರ ಪಡೆಯಲು ಸರ್ಕಾರ ಸಿದ್ಧತೆ ಮಾಡಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದಲ್ಲಿ ಬೆಳಗಾವಿಯ ಸುವರ್ಣಸೌಧದದಲ್ಲಿ ಇಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ ಸಂಬಂಧ ಕೆಲಸ ಬದಲಾವಣೆಯ ಕುರಿತಂತೆ ಮಸೂದೆಯನ್ನು ಮಂಡಿಸಲಾಯಿತು. ಈ ತಿದ್ದುಪಡಿ ಮಸೂದೆಗೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎನ್ನಲಾಗಿದೆ.

ಈ ನಡುವೆ ಮತಾಂತರ ನಿಷೇಧ ಕಾಯಿದೆ ಜಾರಿಗೆ ತರುವ ಸರ್ಕಾರದ ನಿರ್ಧಾರದ ಹಿಂದೆ ದುರುದ್ದೇಶ ಅಡಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಆರೋಪಿಸಿದ್ದು, ಮತಾಂತರ ನಿಷೇಧ ಕಾಯಿದೆ ಜಾರಿಗೆ ತರಲು ಮುಂದಾಗಿರುವ ಸರ್ಕಾರದ ತೀರ್ಮಾನ ವಿರೋಧಿಸಿ ಭಾರತೀಯ ಕ್ರೈಸ್ತ ಒಕ್ಕೂಟ ಹಮ್ಮಿಕೊಂಡಿದ್ದ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಯಿದೆ ತರುವ ಸರ್ಕಾರದ ನಿರ್ಧಾರವನ್ನು ತೀವ್ರವಾಗಿ ವಿರೋಧಿಸುವುದಾಗಿ ಅವರು ತಿಳಿಸಿದ್ದಾರೆ.
