ವರದಿ : ಶ್ರೀದತ್ತ ಹೆಬ್ರಿ
ಹೆಬ್ರಿ : ಕರ್ನಾಟಕ ರಕ್ಷಣಾ ವೇದಿಕೆ ( ಪ್ರವೀಣ್ ಶೆಟ್ಟಿ ಬಣ) ಹೆಬ್ರಿ ತಾಲ್ಲೂಕು ಘಟಕದ ವತಿಯಿಂದ ಎಂಇಎಸ್ ಸಂಘಟನೆಯ ವಿರುದ್ಧ ಪ್ರತಿಭಟನೆ ನಡೆಸಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಬವ್ ಠಾಕ್ರೆ ಪ್ರತಿಕೃತಿ ದಹನ ಮಾಡಿ ಶಿವಸೇನೆ ಮತ್ತು ಎಂಇಎಸ್ ಸಂಘಟನೆಯ ಪುಂಡರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದರು.

ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಸಂಚಾಲಕ ಸಿ.ಎಂ.ಪ್ರಸನ್ನ ಕುಮಾರ್ ಶೆಟ್ಟಿ ಮಾತನಾಡಿ, ಮುಖ್ಯಮಂತ್ರಿಯವರು ಶಿವಸೇನೆ ಮತ್ತು ಎಂಇಎಸ್ ಸಂಘಟನೆಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.

ಕನ್ನಡಿಗರ ತಾಳ್ಮೆಯನ್ನು ಪರೀಕ್ಷೆ ಮಾಡಲು ಬರಬೇಡಿ, ಕನ್ನಡಿಗರು ತಿರುಗಿಬಿದ್ದರೆ ಮುಂದೆ ಆಗುವ ಅನಾಹುತಗಳಿಗೆ ಮಹಾರಾಷ್ಟ್ರ ಸರ್ಕಾರವೇ ಹೊಣೆಯಾಗುತ್ತದೆ ಎಂದು ಎಚ್ಚರಿಸಿದರು. ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಅನ್ಸಾರ್ ಅಹಮ್ಮದ್ ಮತ್ತಿತರರು ಮಾತನಾಡಿದರು. ಎಂಇಎಸ್ ಪುಂಡರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಹೆಬ್ರಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಹೆಬ್ರಿ ತಾಲ್ಲೂಕು ಘಟಕದ ಅಧ್ಯಕ್ಷ ಸೀತಾನದಿ ವಿಜೇಂದ್ರ ಶೆಟ್ಟಿ, ಕಾರ್ಯದರ್ಶಿ ನಿತೀಶ್ ಎಸ್ ಪಿ ಮತ್ತು ವಿವಿಧ ಪದಾಧಿಕಾರಿಗಳು ಭಾಗವಹಿಸಿದ್ದರು.


































