ಉಡುಪಿ: ರಾಜ್ಯದ ಸಕ್ಕರೆ ಕಾರ್ಖಾನೆಗಳಲ್ಲಿ ಎಥೆನಾಲ್ ಉತ್ಪಾದನೆ ಮಾಡುವ ಕುರಿತಂತೆ, ಎಥೆನಾಲ್ ಪಾಲಿಸಿಯನ್ನು ಜಾರಿಗೆ ತರಲು ತೀರ್ಮಾನಿಸಲಾಗಿದೆ ಎಂದು ರಾಜ್ಯದ ಕೈಮಗ್ಗ ಮತ್ತು ಜವಳಿ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಂಕರ ಬಿ. ಪಾಟೀಲ ಮುನೇನಕೊಪ್ಪ ಹೇಳಿದರು.
ಅವರು ಇಂದು ಉಡುಪಿ ನೇಕಾರರ ಪ್ರಾಥಮಿಕ ಸಹಕಾರ ಸಂಘದಲ್ಲಿ ನಡೆದ, ದ.ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೈಮಗ್ಗ ಮತ್ತು ಜವಳಿ ಇಲಾಖೆ ಅಧಿಕಾರಿಗಳ ಸಭೆ ಹಾಗೂ ಉಡುಪಿ ಜಿಲ್ಲಾ ನೇಕಾರರ ಕುಂದು ಕೊರತೆ ಆಲಿಸಿ, ನಂತರ ಪತ್ರಕರ್ತರೊಂದಿಗೆ ಮಾತನಾಡಿದರು.
ರಾಜ್ಯದಲ್ಲಿ ರೈತರು ಬೆಳೆಯುವ ಕಬ್ಬು, ಭತ್ತ ಮತ್ತು ಗೋವಿನ ಜೋಳದಿಂದ ಎಥೆನಾಲ್ ಉತ್ಪಾದಿಸಲು ಸಾಧ್ಯವಿದ್ದು, ದೇಶದಲ್ಲಿ ಈಗಾಗಲೇ ಹೆಚ್ಚಿನ ಪ್ರಮಾಣದಲ್ಲಿ ಎಥೆನಾಲ್ ಉತ್ಪಾದಿಸುತ್ತಿರುವ ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರ ರಾಜ್ಯಗಳಿಗೆ, ರಾಜ್ಯದ ಸಂಶೋಧಕರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದು, ತಾನೂ ಸಹ ಕೇಂದ್ರ ಸಚಿವರೊಂದಿಗೆ ಈ ಬಗ್ಗೆ ಚರ್ಚೆ ನಡೆಸುವುದಾಗಿ ತಿಳಿಸಿದ ಸಚಿವರು, ರಾಜ್ಯದಲ್ಲಿ ಎಥೆನಾಲ್ ಉತ್ಪಾದಕರಿಗೆ ಸಬ್ಸಿಡಿ ಹಾಗೂ ಪ್ರೋತ್ಸಾಹ ನೀಡಲಾಗುವುದು. ಇದರಿಂದ ಹೆಚ್ಚಿನ ಉದ್ಯೋಗ ಸೃಷ್ಟಿ, ರೈತರಿಗೆ ಲಾಭ ಆಗಲಿದೆ. ಸಕ್ಕರೆ ಉದ್ದಿಮೆಗಳ ಪುನ:ಶ್ಚೇತನ ಕೂಡಾ ಸಾಧ್ಯವಾಗಲಿದೆ ಎಂದರು.

ರಾಜ್ಯದಲ್ಲಿ ಉತ್ಪಾದಿಸಲಾಗುವ ಎಥೆನಾಲ್‌ನ್ನು ಸರ್ಕಾರವೇ ಖರೀದಿಸಿ, ಅದನ್ನು ಪೆಟ್ರೋಲಿಯಂ ಕಂಪೆನಿಗಳಿಗೆ ಮಾರಾಟ ಮಾಡಲಿದೆ. ರಾಜ್ಯದಲ್ಲಿ ಎಥೆನಾಲ್ ಉತ್ಪಾದಿಸಲು ಅನುಮತಿ ಕೋರುವ ಎಲ್ಲಾ ಸಕ್ಕರೆ ಕಾರ್ಖಾನೆಗಳಿಗೆ ಸರ್ಕಾರದಿಂದ ಅನುಮತಿ ನೀಡಲಾಗುವುದು. ಸಕ್ಕರೆ ಕಾರ್ಖಾನೆಗಳು ಸಕ್ಕರೆಯೊಂದಿಗೆ ಇತರೆ ಉಪ ಉತ್ಪನ್ನಗಳನ್ನು ತಯಾರಿಸುವ ಮೂಲಕ ಆರ್ಥಿಕವಾಗಿ ಲಾಭ ಹೊಂದಲು ಸಾಧ್ಯ ಎಂದು ಸಚಿವ ಶಂಕರ ಬಿ. ಪಾಟೀಲ ಹೇಳಿದರು.
ಉಡುಪಿಯ ಬ್ರಹ್ಮಾವರದ ಸಕ್ಕರೆ ಕಾರ್ಖಾನೆ ಆರಂಭ ಕುರಿತಂತೆ, ಕಾರ್ಖಾನೆಯ ಆಡಳಿತ ಮಂಡಳಿಯ ಸದಸ್ಯರೊಂದಿಗೆ ಚರ್ಚಿಸಿ, ಕಾರ್ಖಾನೆ ಆರಂಭಕ್ಕೆ ಸರ್ಕಾರದಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರು.
ಸಭೆಯಲ್ಲಿ ಉಡುಪಿ ಶಾಸಕ ರಘುಪತಿ ಭಟ್, ಕೈಮಗ್ಗ ಮತ್ತು ಜವಳಿ ಇಲಾಖೆ ಅಪರ ನಿರ್ದೇಶಕ ಪ್ರಕಾಶ್, ಜಂಟಿ ನಿರ್ದೇಶಕ ಶ್ರೀಧರ ನಾಯ್ಕ್, ಉಡುಪಿ ಜಿಲ್ಲೆಯ ಸಹಾಯಕ ನಿರ್ದೇಶಕ ಅಶೋಕ್, ದ.ಕನ್ನಡ ಜಿಲ್ಲೆಯ ಸಹಾಯಕ ನಿರ್ದೇಶಕ ಶಿವಶಂಕರ್ ಮತ್ತಿತರರು ಉಪಸ್ಥಿತರಿದ್ದರು.



































