ಬೆಂಗಳೂರು : ಬಿಜೆಪಿ ತೊರೆದು ತೆನೆ ಹೊತ್ತು ಬಳಿಕ ಒಂದು ತಿಂಗಳ ಹಿಂದೆಯಷ್ಟೃ ಕೈ ಹಿಡಿದಿದ್ದ ಮಾಜಿ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರನ್ನು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ.
ಈ ಕುರಿತಂತೆ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಆದೇಶ ಹೊರಡಿಸಿದ್ದು, ಆಯನೂರು ಮಂಜುನಾಥ್ ಅವರು ದೃಶ್ಯ ಮಾಧ್ಯಮ, ಮುದ್ರಣ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕವಾಗಿ ರಾಜಕೀಯ ಹಾಗೂ ಸಾಮಾಜಿಕ ವಿಷಯಗಳ ಬಗ್ಗೆ ಚರ್ಚೆಯಲ್ಲಿ ಹೆಚ್ಚು ಪ್ರಚಾರದಲ್ಲಿರುವುದನ್ನು ಗಮನಿಸಲಾಗಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದ ವಿಚಾರಧಾರಗಳನ್ನು ಹಾಗೂ ಸರ್ಕಾರದ ಯೋಜನಗೆಳನ್ನು ಮಾಧ್ಯಮಗಳಲ್ಲಿ ಪರಿಣಾಮಕಾರಿಯಾಗಿ ಬಿಂಬಿಸುವ ಹಿನ್ನಲೆಯಲ್ಲಿ ಆಯನೂರು ಮಂಜುನಾಥ್ ಅವರನ್ನು ಕೆಪಿಸಿಸಿ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ. ತಮಗೆ ನೀಡಿರುವ ಈ ಜವಾಬ್ದಾರಿಯನ್ನು ವಹಿಸಿಕೊಂಡು, ಕೆಪಿಸಿಸಿಯ ಸಂವಹನ ಮತ್ತು ಮಾಧ್ಯಮ ಮುಖ್ಯಸ್ಥರು ನೀಡುವ ಸಲಹೆ ಹಾಗೂ ಮಾರ್ಗದರ್ಶನಗಳ ಅನ್ವಯ ಕಾರ್ಯಪ್ರವೃತ್ತರಾಗಿ ಪಕ್ಷ ಬಲವರ್ಧನೆಗೆ ಸಹಕಾರಿಯಾಗಬೇಕು ಎಂದು ಕೋರುತ್ತೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

2023ರ ವಿಧಾನಸಭಾ ಚುನಾವಣೆಗೂ ಮುನ್ನ ಶಿವಮೊಗ್ಗ ಕ್ಷೇತ್ರದ ಶಾಸಕರಾಗಿದ್ದ ಬಿಜೆಪಿ ಹಿರಿಯ ನಾಯಕ ಕೆ.ಎಸ್ ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ರಾಜೀನಾಮೆ ಘೋಷಿಸಿದ್ದರು. ಆ ಸಂದರ್ಭದಲ್ಲಿ ಬಿಜೆಪಿಯಿಂದ ವಿಧಾನಪರಿಷತ್ ಸದಸ್ಯರಾಗಿದ್ದ ಆಯನೂರು ಮಂಜುನಾಥ್, ಈಶ್ವರಪ್ಪರಿಂದ ತೆರವಾದ ಸ್ಥಾನಕ್ಕೆ ಸ್ಪರ್ಧಿಸುವ ಇರಾದೆ ಹೊಂದಿದ್ದರು. ಆದರೆ, ಬಿಜೆಪಿ ಹೈಕಮಾಂಡ್ ಆಯನೂರು ಮಂಜುನಾಥ್ ಬದಲು ಈಶ್ವರಪ್ಪ ಆಪ್ತ ಚನ್ನಬಸಪ್ಪ ಅವರಿಗೆ ಟಿಕೆಟ್ ನೀಡಿತ್ತು. ಇದರಿಂದ ಅಸಮಾಧಾನಗೊಂಡ ಆಯನೂರು ಮಂಜುನಾಥ್ ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದರು.
ಜೆಡಿಎಸ್ ವಿಧಾನಸಭೆ ಚುನಾವಣೆಗೆ ಟಿಕೆಟ್ ನೀಡಿತ್ತು. ಆದರೆ, ಮಂಜುನಾಥ್ ಸೋಲನುಭವಿಸಿದರು. ಬಳಿಕ ಕಳೆದ ಆಗಸ್ಟ್ 24ರಂದು ಡಿಸಿಎಂ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಕಾಂಗ್ರೆಸ್ ಸೇರಿದ ಬೆನ್ನಲ್ಲೇ ಆಯನೂರು ಮಂಜುನಾಥ್ ಅವರಿಗೆ ಪಕ್ಷ ಉನ್ನತ ಸ್ಥಾನ ಕೊಟ್ಟಿದೆ.


































