ಬೆಂಗಳೂರು : ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಬೀಸಿದ್ದು ಟ್ರಫ್ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಕದ ದಕ್ಷಿಣ ಒಳನಾಡು, ಕರಾವಳಿ ಭಾಗ ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ನವೆಂಬರ್ 7 ರಿಂದ ನವೆಂಬರ್ 9ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ವೇಳೆ ಮಳೆಯಾಗುವ ಪ್ರದೇಶಗಳಲ್ಲಿ ಸುಮಾರು 35 ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದೆ ಎಂದು ಎಚ್ಚರಿಕೆ ನೀಡಿದೆ.

ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಾಗೂ ಕರಾವಳಿ ಮತ್ತು ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಎಲ್ಲೆಲ್ಲಿ ಮಳೆ ?
ಕರಾವಳಿಯ ಉತ್ತರ ಕನ್ನಡ ಜಿಲ್ಲೆ, ಉತ್ತರ ಒಳನಾಡಿನ ಗದಗ, ಹಾವೇರಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಜೊತೆಗೆ, ಮುಂದಿನ 2 ದಿನಗಳಲ್ಲಿ ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಕರಾವಳಿಯ ಒಂದೆರಡು ಭಾಗಗಳಲ್ಲಿ ಕನಿಷ್ಠ ತಾಪಮಾನವು ದಾಖಲಾಗಲಿದೆ. ಅಂದರೆ, ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಕಡಿಮೆ ಉಷ್ಣಾಂಶ ದಾಖಲಾಗುವ ಸಾಧ್ಯತೆಯಿದೆ. ಇನ್ನು ಮೀನುಗಾರಿಕೆಗೆ ತೆರಳುವವರಿಗೆ ಯಾವುದೇ ಮುನ್ಸೂಚನೆಯಿಲ್ಲ. ಉತ್ತರ ಕನ್ನಡ ಜಿಲ್ಲೆಯನ್ನು ಹೊರತುಪಡಿಸಿದರೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಹಗುರದಿಂದ ಮಳೆಯಾಗಲಿದ್ದು, ಮೀನುಗಾರರಿಗೆ ಆತಂಕವಿಲ್ಲ ಎಂದು ತಿಳಿಸಿದೆ.
ಬೆಂಗಳೂರಿನಲ್ಲಿ ಮೋಡ :
ರಾಜ್ಯ ರಾಜಧಾನಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಮಳೆ/ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದ್ದು, ಕೆಲವೊಮ್ಮೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇರುತ್ತದೆ. ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಷಿಯಸ್ ಸಾಧ್ಯತೆ ಇದೆ.

