ನವದೆಹಲಿ : ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದಿಂದ ಯಾರೂ ಕೂಡ ಭಾಗಿಯಾಗುವುದಿಲ್ಲ ಎಂದು ತಿಳಿಸಲಾಗಿದೆ. ಈ ಕುರಿತಾಗಿ ಬುಧವಾರ ಅಧಿಕೃತವಾಗಿ ಹೇಳಿಕೆ ಬಿಡುಗಡೆ ಮಾಡಲಾಗಿದೆ. ಇದನ್ನು ಬಿಜೆಪಿ ಹಾಗೂ ಆರ್‌ಎಸ್‌ಎಸ್ ತನ್ನ ಕಾರ್ಯಕ್ರಮ ಎಂದು ಬಿಂಬಿಸಿದೆ. ಆದರೆ, ಧರ್ಮ ಎನ್ನುವುದು ವೈಯಕ್ತಿಕ ಎಂದು ಕಾಂಗ್ರೆಸ್ ಹೇಳಿದೆ.
ಪಕ್ಷದ ಹಿರಿಯ ನಾಯಕರಾದ ಸೋನಿಯಾ ಗಾಂಧಿ, ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಹಾಗೂ ಅಧೀರ್ ರಂಜನ್ ಚೌಧರಿ ಅವರು ಜನವರಿ 22 ರಂದು ನಡೆಯಲಿರುವ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗೋದಿಲ್ಲ ಎಂದು ಕಾಂಗ್ರೆಸ್ ಬುಧವಾರ ಅಧಿಕೃತವಾಗಿ ತಿಳಿಸಿದೆ.
ಇದರೊಂದಿಗೆ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಒಕ್ಕೂಟದ ನಾಯಕರು ರಾಮ ಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಳ್ಳುವ ಬಗ್ಗೆ ವ್ಯತಿರಿಕ್ತ ಹೇಳಿಕೆಗಳು ಬಂದ ಕಾರಣಕ್ಕೆ, ರಾಮಮಂದಿರ ಉದ್ಘಾಟನೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ಪಾಲ್ಗೊಳ್ಳುತ್ತಾರೋ ಇಲ್ಲವೋ ಎನ್ನುವ ಬಗ್ಗೆ ಅನುಮಾನ ಕೇಳಿ ಬಂದಿತ್ತು. ಇದೀಗ ಉತ್ತರ ಸಿಕ್ಕಿದೆ. ರಾಮಮಂದಿರ ಉದ್ಘಾಟನೆ ಕಾರ್ಯಕ್ರಮ ಸಂಪೂರ್ಣವಾಗಿ ಆರ್‌ಎಸ್‌ಎಸ್ ಹಾಗೂ ಬಿಜೆಪಿ ಕಾರ್ಯಕ್ರಮವಾಗಿ ಕಾಣುತ್ತಿರುವುದರಿಂದ ಇದರಲ್ಲಿ ಭಾಗಿಯಾಗೋದಿಲ್ಲ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ.

“ನಮ್ಮ ದೇಶದಲ್ಲಿ ಲಕ್ಷಾಂತರ ಜನರು ರಾಮನನ್ನು ಪೂಜಿಸುತ್ತಾರೆ. ಆದರೆ, ಧರ್ಮವು ವೈಯಕ್ತಿಕ ವಿಷಯವಾಗಿದೆ. ಆರೆಸ್ಸೆಸ್/ಬಿಜೆಪಿ ಬಹಳ ಹಿಂದಿನಿಂದಲೂ ಅಯೋಧ್ಯೆಯಲ್ಲಿ ಮಂದಿರದ ರಾಜಕೀಯ ಯೋಜನೆಯನ್ನು ಮಾಡಿದೆ. ಬಿಜೆಪಿ ಮತ್ತು ಆರೆಸ್ಸೆಸ್ ನಾಯಕರಿಂದ ಅಪೂರ್ಣ ದೇವಾಲಯದ ಉದ್ಘಾಟನೆಯನ್ನು ಚುನಾವಣಾ ಲಾಭಕ್ಕಾಗಿ ಸ್ಪಷ್ಟವಾಗಿ ಮುಂದಿಡಲಾಗಿದೆ. 2019 ರ ಸರ್ವೋಚ್ಚ ನ್ಯಾಯಾಲಯದ ತೀರ್ಪಿಗೆ ಬದ್ಧರಾಗಿ ಮತ್ತು ಶ್ರೀರಾಮನನ್ನು ಗೌರವಿಸುವ ಲಕ್ಷಾಂತರ ಜನರ ಭಾವನೆಗಳನ್ನು ಗೌರವಿಸುವಾಗ, ಮಲ್ಲಿಕಾರ್ಜುನ ಖರ್ಗೆ, ಶ್ರೀಮತಿ ಸೋನಿಯಾ ಗಾಂಧಿ ಮತ್ತು ಅಧೀರ್ ರಂಜನ್ ಚೌಧರಿ ಅವರು ಆರೆಸ್ಸೆಸ್/ಬಿಜೆಪಿ ಕಾರ್ಯಕ್ರಮದ ಆಹ್ವಾನವನ್ನು ಗೌರವಯುತವಾಗಿ ತಿರಸ್ಕರಿಸಿದ್ದಾರೆ’ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಪ್ರತಿಷ್ಠಾಪನಾ ಸಮಾರಂಭಕ್ಕೆ ಹಲವು ರಾಜಕಾರಣಿಗಳು, ಕ್ರೀಡಾಪಟುಗಳು ಮತ್ತು ಸೆಲೆಬ್ರಿಟಿಗಳನ್ನು ಆಹ್ವಾನಿಸಲಾಗಿತ್ತು. ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಅಧೀರ್ ರಂಜನ್ ಚೌಧರಿ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಆಹ್ವಾನ ನೀಡಲಾಗಿದೆ.


































