ಬೆಂಗಳೂರು : ವಿಧಾನ ಪರಿಷತ್ ಮಾಜಿ ಸದಸ್ಯ, ಮಾಜಿ ಸಚಿವ ಪ್ರೊ. ಮುಮ್ತಾಜ್ ಅಲಿ ಖಾನ್ ವಿಧಿವಶರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಸೋಮವಾರ ಮುಂಜಾನೆ ಬೆಂಗಳೂರಿನ ಗಂಗಾನಗರ ನಿವಾಸದಲ್ಲಿ ಮೃತಪಟ್ಟಿದ್ದಾರೆ.
2008 ರಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಸಂಪುಟದಲ್ಲಿ ಸಚಿವರಾಗಿ ಕರ್ತವ್ಯ ನಿರ್ವಹಿಸಿದ್ದರು. ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಹಜ್, ವಕ್ಫ್ ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವರಾಗಿದ್ದರು. ವಿಧಾನ ಪರಿಷತ್ ಸದಸ್ಯರಾಗಿ ನಾಮ ನಿರ್ದೇಶನಗೊಂಡಿದ್ದ ಅವರು, 2013 ರಲ್ಲಿ ರಾಜೀನಾಮೆ ನೀಡಿದ್ದರು. ಬಳಿಕ ಕಾಂಗ್ರೆಸ್ ಸೇರಿದ್ದರು. 2015ರಲ್ಲಿ ಕಾಂಗ್ರೆಸ್ ಪಕ್ಷ ತೊರೆದಿದ್ದರು.
ಹಲವು ಪ್ರಶಸ್ತಿಗಳು
ಮುಮ್ತಾಜ್ ಅಲಿ ಖಾನ್ ಎಂ.ಎ, ಬಿ.ಎಲ್, ಪಿ.ಹೆಚ್.ಡಿ ಪದವಿ ಪಡೆದಿರುವ ಅವರು, ಸಾಹಿತ್ಯ ಮತ್ತು ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಗೊಂಡಿದ್ದರು. ಕರ್ನಾಟಕ ಸರ್ಕಾರದಿಂದ ಕೊಡಲ್ಪಡುವ ದಸರಾ ಪ್ರಶಸ್ತಿ _ ಸಮಾಜ ಸೇವೆ(1992), ಶ್ರೀ ಜಿ.ನಾರಾಯಣ ಕುಮಾರ್ ಸಂಸ್ಥೆಯಿಂದ ಸಮಾಜ ಸೇವೆಗಾಗಿ ಕನ್ನಡ ರಾಜ್ಯೋತ್ಸವ ಪ್ರಶ್ತಿ(1993), ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ(2002) ಸೇರಿದಂತೆ ಹಲವು ಪ್ರಶಸ್ತಿಗಳು ಮುಮ್ತಾಜ್ ಅಲಿ ಖಾನ್ ಅವರ ಸಾಧನೆಗೆ ದೊರಕಿವೆ.
